47 views 0 secs 0 comments

ಆದಾಯ ಮೀರಿ ಆಸ್ತಿ ಗಳಿಕೆ; ಡಿಕೆಶಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಸಿಬಿಐ

In ದೇಶ
October 21, 2024

ನವದೆಹಲಿ: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಅಲ್ಲದೇ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯನ್ನು ಮರಳಿ ಪಡೆದಿರುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೇಂದ್ರ ತನಿಖಾ ಸಂಸ್ಥೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಈ ಹಿಂದೆ ಸರ್ಕಾರದ ನಿರ್ಧಾರ ಪ್ರಶ್ನಿಸಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಕೂಡ ಸಿಬಿಐ ಅಭಿಪ್ರಾಯ ಕೇಳಿತ್ತು. ವಿಚಾರಣೆಯಲ್ಲಿ ಭಾಗಿಯಾಗುವ ಕುರಿತು ಅಭಿಪ್ರಾಯ ಕೇಳಿತ್ತು. ಹೀಗಾಗಿ ಸಿಬಿಐಯಿಂದಲೂ ಈಗ ಅರ್ಜಿ ಸಲ್ಲಿಕೆಯಾಗಿದ್ದು, ಡಿಕೆಶಿಗೆ ಆತಂಕ ಶುರುವಾಗಿದೆ.

ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು. ಅದರಂತೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿತ್ತು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಸಿಬಿಐ ತನಿಖೆ ಆದೇಶ ಹಿಂಪಡೆಯುವ ನಿರ್ಧಾರ ಕೈಗೊಂಡಿತ್ತು. ಆಗ ಸಚಿವ ಸಂಪುಟ ನಿರ್ಣಯ ಕೈಗೊಂಡಿತು.

ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ಕುರಿತು ಸುಪ್ರೀಂ ಕೋರ್ಟ್ ನಿರ್ಧರಿಸಲಿ. ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅರ್ಜಿ ವಜಾಗೊಳಿಸಿ ಆದೇಶ ನೀಡಿತ್ತು. ಆನಂತರ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ಹಿಂಪಡೆಯುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಆಗಸ್ಟ್ 29 ರಂದು ಹೈಕೋರ್ಟ್ ತಿರಸ್ಕರಿಸಿತ್ತು. ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂಕೋರ್ಟ್‌ ತೀರ್ಮಾನಿಸಲಿ ಎಂದು ಕೂಡ ಆ ವೇಳೆಯೂ ಹೇಳಿತ್ತು.

ಹೀಗಾಗಿ ಬಸನಗೌಡ ಪಾಟೀಲ್ ಯತ್ನಾಳ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಜತೆಗೆ ಸಿಬಿಐ ಅಭಿಪ್ರಾಯವನ್ನೂ ಕೋರಿತ್ತು. ನಂತರ ವಿಚಾರಣೆ ಮುಂದೂಡಿತ್ತು. ಈಗ ಸಿಬಿಐ ಕೂಡ ಡಿಕೆಶಿ ವಿರುದ್ಧ ಅರ್ಜಿ ಸಲ್ಲಿಸಿದೆ.

ಈ ಸುದ್ದಿ ಹಂಚಿಕೊಳ್ಳಿ