ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ; ಜನ- ಜೀವನ ಅಸ್ತವ್ಯಸ್ಥ; ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡದಲ್ಲಿ (Dakshina Kannada) ಮಳೆಯ ಅಬ್ಬರ ಹೆಚ್ಚಾಗಿದೆ. ಹೀಗಾಗಿ ನಾಳೆ(ಜೂ.28) ಜಿಲ್ಲೆಯ ಎಲ್ಲ ಪ್ರಾಥಮಿಕ-ಪ್ರೌಢಶಾಲೆಗಳಿಗೆ (School) ರಜೆ (Holiday) ಘೋಷಿಸಲಾಗಿದೆ.

ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನಾಳೆಯೂ ದಕ್ಷಿಣ ಕನ್ನಡ ಜಿಲ್ಲೆಗೆ ಹವಾಮಾನ ಇಲಾಖೆ (Weather Report) ರೆಡ್ ಅಲರ್ಟ್ (Red Alert) ಘೋಷಿಸಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ. ಹಲವೆಡೆ ಈಗಾಗಲೇ ಜನ- ಜೀವನ ಮಳೆಯಿಂದಾಗಿ ಅಸ್ತವ್ಯಸ್ಥಗೊಂಡಿದೆ.

ಮಂಗಳೂರಿನಲ್ಲಿ ಮಳೆಯಿಂದಾಗಿ ವಿದ್ಯುತ್ ತಂತಿ ತಗುಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಮಳೆಯಿಂದ ಜಿಲ್ಲೆಯ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ನದಿಗೆ ಕಾರು ಬಿದ್ದು ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ಜನರು ಸಂಕಷ್ಟ ಪಡುವಂತಾಗಿದೆ. ರಸ್ತೆಗಳು ಸಂಪೂರ್ಣವಾಗಿ ಜಲಾವೃತವಾಗಿರುವುದರಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ರಜೆ ಘೋಷಿಸಲಾಗಿದೆ.

ಈ ಸುದ್ದಿ ಹಂಚಿಕೊಳ್ಳಿ